ಚಿಕ್ಕಮಗಳೂರು: ರಾಜ್ಯದಲ್ಲಿ ಕನ್ನಡಭಾಷೆ ಉಳಿದು ಬೆಳೆಯಬೇಕಾದರೆ ನಮ್ಮ ವಿದ್ಯಾರ್ಥಿಗಳು ಮತ್ತು ಪೋಷಕರ ಮನೋಭಾವ ಬದಲಾಗಬೇಕು ಎಂದು ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.
ಹತ್ತನೇ ತರಗತಿಯ ಕನ್ನಡ ಮಾಧ್ಯಮದಲ್ಲಿ ಗರಿಷ್ಟ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗರದ ಸುವರ್ಣ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮವನ್ನು ಉದ್ಗಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ವಿ.ಮಲ್ಲೇಶಪ್ಪ ಆಂಗ್ಲಭಾಷೆಯಲ್ಲಿ ಓದಿದ ಯಾವ ವಿದ್ಯಾರ್ಥಿಗಳೂ ಅಧಿಕಾರಿಗಳಾಗಿಲ್ಲ. ಅವರು ಐ.ಟಿ.ಬಿ.ಟಿ. ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಕನ್ನಡದಲ್ಲಿ ವ್ಯಾಸಂಗ ಮಾಡಿದವರು ಉನ್ನತ ಅಧಿಕಾರಿಗಳಾಗಿದ್ದಾರೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು. ಆ ಕುರಿತು ರಾಜ್ಯಸರ್ಕಾರಕ್ಕೆ ಮನವರಿಕೆ ಮಾಡಬೇಕು ಎಂದು ಎಂ.ಕೆ. ಪ್ರಾಣೇಶ್ ಅವರಿಗೆ ಮನವಿ ಸಲ್ಲಿಸಿದರು.
ಹತ್ತನೇ ತರಗತಿಯ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಜೋಡಿತಿಮ್ಮಾಪುರ ಸರ್ಕಾರಿ ಶಾಲೆಯ ವಿದ್ಯಾರ್ಥಿ ಸಾಗರ್, ಕಳಸಾಪುರ ಶಾಲೆಯ ಸಂಭ್ರಮ್, ಕೆ.ಬಿದರೆ ಶಾಲೆಯ ಭೂಮಿಕಾ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಮಂಜುನಾಥ್, ನಗರಸಭೆ ಮಾಜಿ ಅಧ್ಯಕ್ಷ ದೇವರಾಜ್ಶೆಟ್ಟಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಿ.ಎಂ.ಮಂಜುನಾಥಸ್ವಾಮಿ, ಖಜಾಂಚಿ ಪ್ರೊ.ಕೆ.ಎನ್. ಲಕ್ಷ್ಮೀಕಾಂತ್, ವಸ್ತಾರೆ ಹೋಬಳಿ ಅಧ್ಯಕ್ಷ ನಿಂಗೇಗೌಡ ಉಪಸ್ಥಿತರಿದ್ದರು.

























Discussion about this post