ಮಂಗಳೂರು: ಉತ್ತರ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಹೋದ ಪ್ರಿಯಾಂಕಾ ಗಾಂಧಿ ಅವರನ್ನ ಬಂಧಿಸಿರುವುದು ಇಡೀ ಭಾರತೀಯ ಸಂಸ್ಕೃತಿಗೆ ಮಾಡಿದ ಅಪಮಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ, ಪ್ರತಿಭಟನೆ ನಮ್ಮ ಹಕ್ಕು. ಅಹಿಂಸೆ ಮಾರ್ಗದಲ್ಲಿ ಹೋರಾಟ ಮಾಡುವುದು ಗಾಂಧೀಜಿ ಅವರು ನಮಗೆ ಹೇಳಿಕೊಟ್ಟ ಪಾಠ. ರೈತರು ಕಳೆದ ಹತ್ತು ತಿಂಗಳಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಮಂತ್ರಿಗಳಾಗಲಿ, ಮಂತ್ರಿಗಳಾಗಲಿ ಯಾರೂ ರೈತರನ್ನು ಭೇಟಿ ಮಾಡಿ ಮಾತನಾಡಿಲ್ಲ ಎಂದು ಕೇಂದ್ರದ ನಡೆ ವಿರುದ್ಧ ಹರಿಹಾಯ್ದರು.
ಕೇಂದ್ರ ಸಚಿವರ ಮಗ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿ 4 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನ ದಾಳಿ ಮಾಡಿದ್ದಾರೆ. ಇದು ಕೂಡ ನಡೆಯಬಾರದ ಘಟನೆ. ಈ ಘಟನೆಗೆ ಕಾರಣರಾದವರನ್ನು ಬಂಧಿಸಿಲ್ಲ, ಮಂತ್ರಿ ರಾಜೀನಾಮೆ ನೀಡಿಲ್ಲ ಇದು ಒಂದು ಸರ್ಕಾರನಾ? ಎಂದು ಅವರು ನೈತಿಕ ಪ್ರಶ್ನೆ ಎತ್ತಿದ್ದಾರೆ.
ಹಾಗೆಯೇ ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಮುಂದಾಗಿದ್ದ ನಮ್ಮ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಸಾಂತ್ವನ ಹೇಳುವುದು ರಾಜಕೀಯ ಕರ್ತವ್ಯ. ಅದನ್ನು ಮಾಡಲು ಹೋದರೆ ಪುರುಷ ಪೊಲೀಸ್ ಅಧಿಕಾರಿಗಳು ಎಳೆದಾಡಿ ಅವರ ಹಕ್ಕನ್ನು ಕಸಿದಿದ್ದಾರೆ. ಇದು ಇಡೀ ಭಾರತೀಯ ಸಂಸ್ಕೃತಿಗೆ ಮಾಡಿದ ಅಪಮಾನ ಎಂದು ಟೀಕಿಸಿದ್ದಾರೆ.

























Discussion about this post