ಚಿಕ್ಕಮಗಳೂರು : ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಅನ್ನದಾತರ ಮೇಲೆ ಕಾರು ಚಲಾಯಿಸಿ ರೈತರನ್ನು ಹತ್ಯೆಗೈದಿರುವ ಕೇಂದ್ರ ಸಚಿವ ಅಜಯ್ ಮಿಶ್ರ ಅವರ ಪುತ್ರನನ್ನು ತಕ್ಷಣ ಬಂಧಿಸಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹೆಚ್.ಹೆಚ್.ದೇವರಾಜ್ ಒತ್ತಾಯಿಸಿದ್ದಾರೆ.
ಪ್ರತಿಭಟನೆ ನಡೆಸುವ ಹಕ್ಕನ್ನು ದೇಶದ ಸಂವಿಧಾನ ಎಲ್ಲರಿಗೂ ನೀಡಿದೆ. ಆ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಯನ್ನು ವಿರೋಧಿಸಿ ಅನ್ನದಾತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅದನ್ನು ತಡೆಯಲು ಗೂಂಡಾಗಿರಿ ಮಾಡುವುದು ಅಕ್ಷಮ್ಯ ಅಪರಾಧ ಮತ್ತು ಪ್ರಜಾಪ್ರಭುತ್ವದ ಕಗ್ಗೋಲೆಯಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತ ಅನ್ನದಾತರ ಮೇಲೆ ಕಾರು ಚಲಾಯಿಸಿ ರೈತರನ್ನು ಹತ್ಯೆ ಮಾಡಿರುವ ಕೇಂದ್ರ ಸಚಿವ ಅಜಯ್ ಮಿಶ್ರ ಅವರ ಪುತ್ರನನ್ನು ತಕ್ಷಣ ಬಂಧಿಸಬೇಕು. ಅವರ ವಿರುದ್ಧ ಹತ್ಯೆ ಪ್ರಕರಣವನ್ನು ದಾಖಲಿಸಬೇಕು. ಮೃತಪಟ್ಟ ರೈತರ ಕುಟುಂಬಗಳಿಗೆ ಕೂಡಲೇ ಪರಿಹಾರ ನೀಡಬೇಕು, ಕೇಂದ್ರ ಸಚಿವ ಅಜಯ್ ಮಿಶ್ರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಕಾರು ಡಿಕ್ಕಿ ಹೊಡೆದು ಮೃತಪಟ್ಟಿರುವ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡಬೇಕು. ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿಯ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಮೂಡಿಗೆರೆ ಶಾಸಕರೇ ಭರಿಸಬೇಕು. ಅಪಘಾತದ ವೇಳೆ ಕಾರು ಚಾಲಕ ಪಾನಮತ್ತನಾಗಿದ್ದನೆಂಬ ಆರೋಪದ ಹಿನ್ನೆಲೆಯಲ್ಲಿ ನಿಸ್ಪಕ್ಷಪಾತವಾದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರ ನಡೆಸುತ್ತಿರುವ ಪ್ರತಿಭಟನಾ ನಿರತ ರೈತರ ಮೇಲಿನ ದೌರ್ಜನ್ಯವನ್ನು ಕೈಬಿಟ್ಟು ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿರುವ ದೇವರಾಜ್ ಅನ್ನದಾತರ ಮೇಲಿನ ದೌರ್ಜನ್ಯ ಇದೇ ರೀತಿ ಮುಂದುವರೆದಲ್ಲಿ ಅದರ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

























Discussion about this post