ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ಜಾತ್ಯಾತೀತತೆ ಹಾಗೂ ತತ್ವ ಸಿದ್ದಾಂತವನ್ನು ಒಪ್ಪಿಕೊಂಡಿರುವ ಯುವಜನತೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಒಲವು ತೋರುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಹೇಳಿದರು.
ಅವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಬಿಜೆಪಿ ದುರಾಡಳಿತವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನರಗುಡ್ಡನಹಳ್ಳಿ ರಮೇಶ್, ವಕೀಲ ಚಂದ್ರು, ಅಶೋಕ್, ಮೂರ್ತಿ, ಚಂದನ್, ಚಂದ್ರು ಸೇರಿದಂತೆ ೨೫ಕ್ಕೂ ಹೆಚ್ಚು ಯುವಕರಿಗೆ ಕಾಂಗ್ರೆಸ್ ಪಕ್ಷದ ಬಾವುಟವನ್ನು ನೀಡಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಬರೆದಿರುವ ಸಂವಿಧಾನಕ್ಕೆ ಗೌರವ ಸಲ್ಲಿಸುವ ಮೂಲಕ ಅವರ ಆಶಯದಂತೆ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ತಿಳಿಸಿದರು.
ದಿನದಿಂದ ದಿನಕ್ಕೆ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗುತ್ತಿದ್ದು, ಬೆಲೆ ಏರಿಕೆಯಿಂದ ಜನರು ಕಂಗೆಟ್ಟಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕನಿಷ್ಟ ಜ್ಞಾನ ಕೂಡ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳಿಗೆ ಇಲ್ಲ. ಸಂವಿಧಾನ ವಿರೋಧಿ ಬಿಜೆಪಿ ಪಕ್ಷವನ್ನು ಕಿತ್ತೊಗಿಯಲು ಎಲ್ಲರೂ ಮುಂದಾಗಬೇಕು. ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯವನ್ನು ಜನರಿಗೆ ತಿಳಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಮಾಜಿ ಶಾಸಕಿ ಎ.ವಿ.ಗಾಯತ್ರಿ ಶಾಂತೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿಯವರಿಗೆ ಸತತ ಅಧಿಕಾರ ನೀಡಿದ್ದರ ಫಲ ಯಾವುದೇ ಉತ್ತಮವಾದ ಕೆಲಸಗಳು ಮಾಡಲು ಸಾಧ್ಯವಾಗಿಲ್ಲ. ಈ ಕ್ಷೇತ್ರದ ಶಾಸಕರು ಅಧಿಕಾರದ ಅಹಂನಿಂದ ಮೈಮರೆತಿದ್ದಾರೆ. ಅವರಿಗೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಜನರು ಸೋಲಿನ ಪಾಠವನ್ನು ಕಲಿಸಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಮುಂದಾಗಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಉತ್ತಮವಾದ ಅಭಿವೃದ್ಧಿಯ ಕೆಲಸಗಳು ನಡೆಯುತ್ತಿಲ್ಲ. ಇದರಿಂದ ಬೇಸತ್ತಿರುವ ರೈತ ಸಮುದಾಯ ಯುವ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ. ಬದಲಾವಣೆಯ ಗಾಳಿ ದೇಶದೆಲ್ಲಡೆ ಬೀಸುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಭವಿಷ್ಯವಿದೆ. ಕಳೆದು ಹೋಗಿರುವ ಶಕ್ತಿಯನ್ನು ಮರಳಿ ಪಡೆಯಲು ಅವಕಾಶ ಸಿಕ್ಕಿದ್ದು, ಅದನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ನಗರಸಭೆಯಲ್ಲಿ ಕಮಿಷನ್ ದಂಧೆ ನಡೆಯುತ್ತಿದ್ದರೂ ಈ ಕ್ಷೇತ್ರದ ಶಾಸಕರು ಕಣ್ಣುಮುಚ್ಚಿ ಕುಳಿತಿದ್ದಾರೆ. ಇವರ ನಡೆಯನ್ನು ಗಮನಿಸಿದರೆ ಅನುಮಾನ ಮೂಡುತ್ತಿದೆ. ಮುಂದೆ ನಡೆಯುವ ನಗರಸಭೆ ಚುನಾವಣೆಯಲ್ಲಿ ನಗರಸಭೆ ಕಾಂಗ್ರೆಸ್ ವಶ ಆಗಲಿದ್ದು, ಕಾರ್ಯಕರ್ತರು ಪಕ್ಷದ ಹಿರಿಯ ನಾಯಕರ, ಎಲ್ಲಾ ಬ್ಲಾಕ್ ಅಧ್ಯಕ್ಷರು, ನಗರ, ಜಿಲ್ಲಾ ಅಧ್ಯಕ್ಷರ ಮಾರ್ಗದರ್ಶನದಲ್ಲಿ ಮುನ್ನಡೆಯೋಣ ಎಂದರು.
ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ ದರು. ಕಾರ್ಯಕ್ರಮದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ನಾಯ್ಡು, ಅಲ್ಪ ಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ನಯಾಜ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಟಿ.ವೆಂಕಟೇಶಮೂರ್ತಿ, ಶೃದೀಪ್, ಹೋಬಳಿ ಅಧ್ಯಕ್ಷ ನಾಗೇಶ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು
—————-
ಬಿಜೆಪಿ ಪಕ್ಷದಿಂದ ವಿಮುಖರಾಗಿ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬರುತ್ತಿದೆ. ನಗರಸಭೆ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆದರೆ ಬಿಜೆಪಿಯ ಬಣ್ಣ ಬಯಲಾಗುತ್ತದೆ ಎಂಬ ಭಯಕ್ಕೆ ಚುನಾವಣೆಗಳನ್ನು ಬಿಜೆಪಿ ಮುಂದೂಡುತ್ತಿದೆ. ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ
ರೇಖಾ ಹುಲಿಯಪ್ಪಗೌಡ, ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ
—————-
Discussion about this post