ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ 2019 ರಿಂದ ಇಲ್ಲಿಯವರೆಗೆ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡ ಸುಮಾರು 42.46ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಕಳವು ಪ್ರಕರಣಗಳ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಒಟ್ಟು 14 ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡ ಸ್ವತ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಮಡಿಕೇರಿ ಗ್ರಾಮಾಂತರ ಹಾಗೂ ಶನಿವಾರಸಂತೆ ಪೊಲೀಸ್ ಠಾಣೆಯ ತಲಾ 3 ಪ್ರಕರಣಗಳು, ಸೋಮವಾರಪೇಟೆ ಪೊಲೀಸ್ ಠಾಣೆಯ 5 ಪ್ರಕರಣಗಳು, ವೀರಾಜಪೇಟೆ ಹಾಗೂ ಗೋಣಿಕೊಪ್ಪ ಪೊಲೀಸ್ ಠಾಣೆಯ ತಲಾ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ರೂ.31,67,000 ಬೆಲೆ ಬಾಳುವ ಒಟ್ಟು 401 ಗ್ರಾಂ.ನ ಚಿನ್ನದ ಆಭರಣಗಳು, ರೂ.1,19,500 ನಗದು, ರೂ.2,74,000 ಬೆಲೆಬಾಳುವ ಮೊಟಾರ್ ಸೈಕಲ್, ರೂ. 6,86,000 ಬೆಲೆ ಬಾಳುವ ಮಾರುತಿ ಕಾರು ಹಾಗೂ ಇತರೆ ವಸ್ತುಗಳು ಸೇರಿದಂತೆ 42,46,500 ಬೆಲೆ ಬಾಳುವ ಸ್ವತ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಪ್ರಕರಣಗಳಲ್ಲಿ ಮಾಹಿತಿ ಸಂಗ್ರಹಿಸಿ ಕಳವು ಪ್ರಕರಣಗಳನ್ನು ಪತ್ತೆಹಚ್ಚಿದ ಕೊಡಗು ಜಿಲ್ಲೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರಾ ಅವರು ನಗದು ಬಹುಮಾನವನ್ನು ಘೋಷಿಸಿದ್ದಾರೆ.

























Discussion about this post