ಉಡುಪಿ: ಕಾಂಗ್ರೆಸ್ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡೀಸ್ ನಿಧನ ಹೊಂದಿದ್ದಾರೆ. ಯೆನಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದ ಕಾರಣ ನಿಧನ ಹೊಂದಿದ್ದಾರೆ. ಕಾಂಗ್ರೆಸ್ ಪ್ರಭಾವಿ ನಾಯಕರಾಗಿದ್ದ ಆಸ್ಕರ್ ಅವರು ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಯೋಗ ಮಾಡುವ ವೇಳೆ ಆಯತಪ್ಪಿ ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ನಾಹೀನ ಸ್ಥಿತಿಯಲ್ಲಿದ್ದರು. ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಆಸ್ಕರ್ ಅವರು ಪತ್ನಿ ಬ್ಲೋಸಮ್ ಫರ್ನಾಂಡಿಸ್ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಫರ್ನಾಂಡೀಸ್ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಹ ಕೆಲಸ ಮಾಡಿ ಸೈ ಎನಿಸಿಕೊಂಡಿದ್ದರು.
ಫರ್ನಾಂಡಿಸ್ ಅವರು ಮಾರ್ಚ್ ೨೭, ೧೯೪೧ರಲ್ಲಿ ಉಡುಪಿಯಲ್ಲಿ ಜನಿಸಿದರು. ಜನವರಿ ೧೮, ೧೯೮೦ರಲ್ಲಿ ಉಡುಪಿಯಿಂದಲೇ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಳಿಕ ೧೭ ಜೂನ್ ೨೦೧೩ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾಗಿದ್ದರು. ಐದು ಬಾರಿ ಉಡುಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದರು. ೨೦೦೪ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಆಸ್ಕರ್ ಫರ್ನಾಂಡಿಸ್ ಅವರ ಅಕಾಲಿಕ ನಿಧನಕ್ಕೆ ಗಣ್ಯರು, ಪಕ್ಷದ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.

























Discussion about this post