ಚಿಕ್ಕಮಗಳೂರು,ಅಕ್ಟೋಬರ್.೧೨:- ಕಾಂಗ್ರೆಸ್ ಪಕ್ಷದ ಮೇಲೆ ಜನರು ಇಟ್ಟಿರುವ ವಿಶ್ವಾಸ, ಭರವಸೆಯನ್ನು ಉಳಿಸಿಕೊಳ್ಳಲು ಪಕ್ಷದ ಪ್ರತಿಯೊಬ್ಬ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಸಲಹೆ ನೀಡಿದರು.
ಅವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಬಿಜೆಪಿ ದುರಾಡಳಿತವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಗಣೇಶ್, ಮಧು, ಅರುಣ್ ನೇತೃತ್ವದಲ್ಲಿ ಸುಮಾರು ೨೦ಕ್ಕೂ ಹೆಚ್ಚು ಯುವಕರಿಗೆ ಕಾಂಗ್ರೆಸ್ ಪಕ್ಷದ ಬಾವುಟವನ್ನು ನೀಡಿ ಮಾತನಾಡಿ, ಪಕ್ಷದ ಹಿರಿಯ ನಾಯಕರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಅವರಿಗೆ ಬೆಂಬಲವಾಗಿ ನಾವುಗಳು ಕೈಜೋಡಿಸುವುದರ ಜೊತೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಕ್ಷೇತ್ರದ ಶಾಸಕರಿಗೆ ಸಾಮಾನ್ಯ ಜನರ ಬದುಕಿನ ಬಗ್ಗೆ ಚಿಂತನೆಯಿಲ್ಲ. ಜನರ ಅಭಿವೃದ್ಧಿಗಿಂತ ಶಾಸಕರ ಅಭಿವೃದ್ಧಿಯೇ ಹೆಚ್ಚಾಗಿದೆ. ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದ ಸಂದರ್ಭದಲ್ಲಿ ಜಾರಿಗೆ ತಂದ ಯೋಜನೆಗಳನ್ನು ಬಿಜೆಪಿ ಹೆಸರು ಬದಲಾಯಿಸುವ ಕೀಳು ಮಟ್ಟದ ರಾಜಕೀಯಕ್ಕೆ ಇಳಿದಿದ್ದು, ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಈ ಕ್ಷೇತ್ರದ ಶಾಸಕರಿಗೆ ತಕ್ಕ ಪಾಠ ಕಲಿಸುವ ಕಾಲ ಹತ್ತಿರದಲ್ಲಿದೆ ಎಂದು ಹೇಳಿದರು.
ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳು ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದು, ಜಾತಿಗಳ ಮಧ್ಯೆ ವಿಷ ಬೀಜವನ್ನು ಬಿತ್ತಿ ದ್ವೇಷವನ್ನು ಹರಡುತ್ತಿವೆ. ಹಿಂದೂ, ಮುಸಲ್ಮಾನರು ಸೌಹಾರ್ದತೆಯಿಂದ ಇರುವುದನ್ನು ತಾಳಲಾರದೆ, ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ದೂರಿದರು.
ಈ ದೇಶದ ವ್ಯವಸ್ಥೆಯನ್ನು ಕಾಂಗ್ರೆಸ್ ಉತ್ತಮಪಡಿಸಿದ್ದು, ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬಂತೆ ಜಗತ್ತೇ ಒಪ್ಪುವಂತಹ ಸಂವಿಧಾನವನ್ನು ಕೊಟ್ಟಿದ್ದು, ಪ್ರತಿಯೊಬ್ಬರ ಭವಿಷ್ಯವನ್ನು ರೂಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಆದರೆ ಸಂವಿಧಾನ ಬದಲಾವಣೆ ಮಾಡಬೇಕು ಎಂಬುದು ಬಿಜೆಪಿಯ ಕೀಳು ಮಟ್ಟದ ವಾದವಾಗಿದೆ. ದೇಶದ ಸಂಪತ್ತನ್ನು ಖಾಸಗಿಯವರಿಗೆ ಮಾರಾಟ ಮಾಡುವ ಮೂಲಕ ಯುವಕರನ್ನು ನಿರುದ್ಯೋಗಕ್ಕೆ ದೂಡಲಾಗುತ್ತಿದೆ. ಹೀಗೆ ಮುಂದುವರೆದಲ್ಲಿ ಮುಂದಿನ ದಿನಗಳಲ್ಲಿ ಗಂಡಾಂತರ ಎದುರಿಸಬೇಕಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್ ಮಾತನಾಡಿ, ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ದೇಶದಲ್ಲಿ ಮಹಿಳೆಯರಿಗೆ, ಮಕ್ಕಳಿಗೆ, ದೀನ ದಲಿತರಿಗೆ, ಅಲ್ಪಸಂಖ್ಯಾತರಿಗೆ ರಕ್ಷಣೆಯಿಲ್ಲದಂತಾಗಿದೆ. ದೇಶದಲ್ಲಿ ನಿರುದ್ಯೋಗ ಸೃಷ್ಟಿಯಾಗಿ ಯುವಕರು ಉದ್ಯೋಗವನ್ನು ಕಳೆದುಕೊಳ್ಳುತ್ತಿದ್ದಾರೆ. ಬಿಜೆಪಿಯ ದುರಾಡಳಿತನ್ನು ಸಹಿಸದೆ ಯುವಕರು ಕಾಂಗ್ರೆಸ್ ಸೇರುತ್ತಿರುವುದು ಉತ್ತಮವಾದ ಬೆಳವಣಿಗೆ ಎಂದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ಸಂವಿಧಾನ ಬದ್ದವಾಗಿ ನಡೆಯುವ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ದೇಶದ ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸಲು ಬಿಜೆಪಿ ವಿಫಲವಾಗಿದ್ದು, ಕೃಷಿ ಕಾಯಿದೆ ಮಸೂದೆಯನ್ನು ಜಾರಿಗ ತರುವ ಮೂಲಕ ರೈತರಿಗೆ ಮರಣ ಶಾಸನವನ್ನು ಬರೆಯಲು ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳು ಪಿತೂರಿ ನಡೆಸಿವೆ. ನಾವುಗಳು ಜಾಗೃತರಾಗದಿದ್ದಲ್ಲಿ ನಮ್ಮ ಅವನತಿಯನ್ನು ನಾವೇ ತಂದುಕೊಳ್ಳುವ ಪರಿಸ್ಥಿತಿ ಉಂಟಾಗಲಿದೆ ಎಂದು ಹೇಳಿದರು.
ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ, ದೀನ ದಲಿತರಿಗೆ ಹಾಗೂ ಅಲ್ಪಸಂಖ್ಯಾತರಿಗೆ ನ್ಯಾಯ ದೊರಕಿಸಿ ಕೊಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ನಗರಸಭೆಯನ್ನು ನರಕಸಭೆಯನ್ನಾಗಿ ಈ ಕ್ಷೇತ್ರದ ಶಾಸಕರು ಬದಲಾಯಿಸಿದ್ದು, ಕಾಂಗ್ರೆಸ್ ಪಕ್ಷವನ್ನು ಎಲ್ಲರೂ ಬೆಂಬಲಿಸುವ ಮೂಲಕ ಮುಂದಿನ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಮಹಮದ್ ನಯಾಜ್ ಮಾತನಾಡಿ, ದಿನ ಕಳೆದಂತೆ ಬಿಜೆಪಿ ತೊರೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ ಕಾರಣ ಬಿಜೆಪಿ ಎಂದರೆ ಬೋಗಸ್ ಎನ್ನುವುದು ಯುವ ಜನಾಂಗಕ್ಕೆ ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಯುವಕರು ಬಿಜೆಪಿ ಹಾಗೂ ಇತರೆ ರಾಜಕೀಯ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಯುವಕರು ಕಾಂಗ್ರೆಸ್ ಪಕ್ಷದ ಯುವನಾಯಕರು ಎಂದು ಬಣ್ಣಿಸಿದರು.
ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಿ.ಎಸ್.ಚಂದ್ರೇಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ಪಿ.ತನೋಜ್ ಕುಮಾರ್, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ವಿನಾಯಕ ಜೆ.ಗಾಣಿಗ, ಮುಖಂಡರಾದ ಸಂಜು, ಅಬ್ದುಲ್ ರೆಹಮಾನ್, ಜಾವೀದ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

























Discussion about this post