ಚಿಕ್ಕಮಗಳೂರು: ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ರೈತರ ಹತ್ಯೆ ಖಂಡಿಸಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ನಗರದ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದರು.
ರೈತರ ಹತ್ಯಾಕಾಂಡಕ್ಕೆ ಕಾರಣರಾದ ಎಲ್ಲಾ ಅಪರಾಧಿಗಳನ್ನು ತಕ್ಷಣ ಬಂಧಿಸಬೇಕು, ಕೇಂದ್ರ ಸಚಿವರನ್ನು ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
ಪ್ರತಿಭಟನೆ ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಮಾತನಾಡಿ ಉತ್ತರ ಪ್ರದೇಶದ ಲಖೀಂಪುರ್ದಲ್ಲಿ ರೈತ ವಿರೋಧಿ ಕಾಯ್ದೆಗಳನ್ನು ಖಂಡಿಸಿ ಸಂವಿಧಾನಿಕವಾಗಿ ನಡೆಸುತ್ತಿದ್ದು ರೈತ ಹೋರಾಟದ ಕೇಂದ್ರ ಸಚಿವ ಅಜಯ್ ಮಿಶ್ರಾ ಮಗ ಆಶೀಶ್ ಮಿಶ್ರಾ ರೈತ ಹೋರಾಟಗಾರರ ಮೇಲೆ ಕಾರು ಹರಿಸಿದ್ದರು. ಇದರಲ್ಲಿ ೪ ಜನ ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಆದರೆ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತರ ಪ್ರದೇಶ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಇದನ್ನು ಖಂಡಿಸಿ ಕೇಂದ್ರದ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ಸೂಚನೆಯಂತೆ ಮೌನಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರವು ಸರ್ವಾಧಿಕಾರಿ ಆಡಳಿತದ ಮೂಲಕ ಧೋರಣೆಗಳನ್ನು ರೈತರು, ಕಾರ್ಮಿಕರು, ಜನಸಾಮಾನ್ಯರ ಮೇಲೆ ಹೇರಲು ಸಂಚು ರೂಪಿಸಿದೆ. ಹಿಂಸಾಚಾರದಲ್ಲಿ ಮೃತಪಟ್ಟ ರೈತರಿಗೆ ಸಾಂತ್ವಾನ ಹೇಳುವ ಕನಿಷ್ಟ ಸೌಜನ್ಯವೂ ಇಲ್ಲದ ವಿರೋಧಿ ಸರ್ಕಾರ ಇದಾಗಿದೆ ಎಂದು ಟೀಕಿಸಿದರು.
ಘಟನೆ ನಡೆದ ಬಳಿಕ ನಾಪತ್ತೆಯಾಗಿದ್ದ ಕೇಂದ್ರ ಸಚಿವರ ಪುತ್ರಾ ಆಶೀಶ್ ಮಿಶ್ರಾನನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನದಲ್ಲಿಟ್ಟಿದ್ದಾರೆ. ಆದರೆ ಕೃತ್ಯ ಎಸಗಿದ ಆತನ ವಿರುದ್ಧ ಇದುವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕೂಡಲೇ ಆತನ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು, ಜತೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಸಚಿವ ಅಜಯ್ ಮಿಶ್ರಾ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಕಿಸಾಲ್ ಸೆಲ್ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಕಾಂಗ್ರೆಸ್ ನಗರ ಅಧ್ಯಕ್ಷ ತನೋಜ್ಕುಮಾರ್, ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್, ಐಟಿ ಸೆಲ್ ಅಧ್ಯಕ್ಷ ವಿನಾಯಕ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸಂದೇಶ್, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಮಹಮದ್ ನಯಾಜ್, ಮುಖಂಡರಾದ ಪ್ರಕಾಶ್, ವೆಂಕಟೇಶ್, ಕೋಟೆ ಆನಂದ್, ವರದರಾಜ್, ಸೋಮಶೇಖರ್ ಸೇರಿದಂತೆ ಮತ್ತಿತರರು ಇದ್ದರು.

























Discussion about this post